ರಾಜ್ಯದಲ್ಲಿ ಉಷ್ಣ ಗಾಳಿ ಆರ್ಭಟ ಕಡಿಮೆಯಾಗುತ್ತಿದ್ದು, ವಾರಾಂತ್ಯದಿಂದ ಎಲ್ಲೆಡೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಕಡಿಮೆಯಾಗುತ್ತಿದೆ. ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿಯೂ ಬಿಸಿಲಿನ ತಾಪ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ.
Karnataka weather Updates : ಕರ್ನಾಟಕ ಹವಾಮಾನ ವರದಿ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರುಪೂರ್ವ ಮಳೆ ಸುರಿಯುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಇದೇ ವಾತಾವರಣ ಮುಂದುವರಿಯಲಿದೆ. ಹಗಲು ಬಿಸಿಲು, ಮೋಡದ ವಾತಾವರಣ ಇರಲಿದ್ದು, ಸಂಜೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ದಕ್ಷಿಣ ಒಳನಾಡಿನ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯಂದಿಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯಂದಿಗೆ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೇದರ್, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಕೆಲವೆಡೆ ಹಗುರವಾದ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
09 ರಿಂದ ಭಾರೀ ವರ್ಷಧಾರೆ:
ಮೇ 9 ರಿಂದ 15ರವೆರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಮಲೆನಾಡು ಪ್ರದೇಶ ಒಳಗೊಂಡಂತೆ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮೇ 12ರಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಮೇ 13ರಿಂದ ಕರಾವಳಿ ಸೇರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರಿಂದ ಇದೇ ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ನಾಡಿನೆಲ್ಲೆಡೆ ಆವರಿಸಿಕೊಳ್ಳುತ್ತಿರುವುದು ಬರದ ತೀವ್ರತೆ ತುಸು ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಮೇ 9 : ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 10: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ 11 &12: ದಕ್ಷಿಣ ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವೆಡೆ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 13ರಿಂದ 15ರವರಗೆ: ರಾಜ್ಯದ ಕೆಲ ಭಾಗಗಳಲ್ಲಿ ಕನಿಷ್ಠ 50 ಮಿ.ಮೀ.ನಿಂದ ಗರಿಷ್ಠ 70 ಮಿ.ಮೀ. ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ. ಈ ಅವಧಿಗೆ ಯಾವುದೇ ಮುನ್ನೆಚ್ಚರಿಕೆ ನೀಡಿಲ್ಲ.
ಬುಧವಾರ ಹಳೇ ಮೈಸೂರು ಭಾಗದಲ್ಲಿ ಹಲವೆಡೆ ಸಾಧಾರಣ ಪ್ರಮಾಣದ ಮಳೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ಮಂಡ್ಯ, ಹಾಸನ, ಕೊಡಗು, ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ವರ್ಷಧಾರೆಯಾಗಿದೆ. ಸೋಮವಾರಪೇಟೆ ತಾಲೂಕಿನ ಕೇಡಕಲ್ ಗ್ರಾಪಂ ವ್ಯಾಪ್ತಿಯಲ್ಲಿ 40 ಮಿ.ಮೀ. ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹಾಗೂ ಸಿಂಧಗಿ ತಾಲೂಕಿನ ಕೆಲವೆಡೆ ಮಳೆಯಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ